August 16, 2026

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ, ‘ಯೆಲ್ಲೋ ಅಲರ್ಟ್’: ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

0

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಜೋರಾಗಿದ್ದು, ಇಂದು ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 23ರ ಗುರುವಾರ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಈ ಆದೇಶ ನೀಡಿದ್ದು, ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು 12ನೇ ತರಗತಿವರೆಗಿನ ಪದವಿಪೂರ್ವ ಕಾಲೇಜುಗಳಿಗೆ ಜುಲೈ 23ರಂದು ರಜೆ ಅನ್ವಯವಾಗಲಿದೆ. ಜಿಲ್ಲಾಡಳಿತದ ಈ ರಜಾ ಆದೇಶವನ್ನು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51(ಬಿ)ರ ಅನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ: ಮಳೆಯ ತೀವ್ರತೆ ಹೆಚ್ಚಿರುವ ಕಾರಣ ಸಾರ್ವಜನಿಕರು ಹಾಗೂ ಪೋಷಕರು ಜಾಗರೂಕರಾಗಿರಲು ಜಿಲ್ಲಾಡಳಿತ ಸೂಚಿಸಿದೆ. ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ಹಳ್ಳ, ಕೊಳ್ಳಗಳು, ನದಿ ಹಾಗೂ ಸಮುದ್ರ ತೀರಗಳಿಗೆ ಮಕ್ಕಳು ತೆರಳದಂತೆ ಪೋಷಕರು ವಿಶೇಷ ನಿಗಾ ವಹಿಸಬೇಕು. ಕಡಲಿನಲ್ಲಿ ಅಲೆಗಳ ತೀವ್ರತೆ ಹೆಚ್ಚಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದ್ದು, ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ಹಾಗೂ ಸಮುದ್ರ ತೀರಗಳಿಗೆ ತೆರಳಬಾರದೆಂದು ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *